ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಒಂದು ಮಹತ್ವದ ಹೆಜ್ಜೆಯಾಗಿದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣದಲ್ಲಿ ಭಾಗವಹಿಸಲು ಯುವಜನರಿಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ.
ರೋಜ್ ಗಾರ್ ಮೇಳ ದೇಶಾದ್ಯಂತ 45 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿಗಳು ನಡೆಯುತ್ತಿವೆ. ದೇಶಾದ್ಯಂತ ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳು ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ಸೇರ್ಪಡೆಯಾಗಲಿದ್ದಾರೆ.
*****